ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದೆ. ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬುಧವಾರ ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಚಿನ್ನ ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿರುವ ರನ್ಯಾರಾವ್ ಪ್ರಕರಣ ಹಾಗೂ ಇತ್ತೀಚೆಗೆ ಪರಮೇಶ್ವರ ಅವರು ಖರೀದಿಸಿರುವ ಎಚ್ ಎಂ ಎಸ್ ಎಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು