![]()
ನೆಲಮಂಗಲ: ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಳವು ಮಾಡುವಾಗ ಸರಗಳ್ಳರು ಮಹಿಳೆಯ ಮುಖಕ್ಕೆ ಸ್ಪ್ರೇ ಸಿಂಪಡಿಸಿದ ಪರಿಣಾಮ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಜ್ಯೋತಿ (45) ಎಂಬವರು ಮೃತಪಟ್ಟಿದ್ದಾರೆ. ಬೆಳಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಬೈಕ್ ನಲ್ಲಿ ಬಂದ ಸರಗಳ್ಳರು ಮಹಿಳೆಯ ಮುಖಕ್ಕೆ ಕೆಮಿಕಲ್ ಸ್ಪ್ರೇ ಮಾಡಿದ್ದಾರೆ. ಈ ವೇಳೆ ಆಕೆ ಕುಸಿದು ಬಿದ್ದಿದ್ದಾರೆ. ಕಳ್ಳರು ಮಹಿಳೆಯ ಕೊರಳಲ್ಲಿದ್ದ 70 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ಬಳಿಕ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನ ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.
Editor TumkurVarthe
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು






