
ಬೆಂಗಳೂರು: ಗೌರವ ಧನ ಹೆಚ್ಚಳ ಮಾಡಬೇಕು ಹಾಗೂ ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಆರೋಗ್ಯ ಇಲಾಖೆಯ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ 7 ಸಾವಿರ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ವಜಾಗೊಳಿಸುವ ರಾಜ್ಯ ಸರ್ಕಾರದ ನಿರ್ಧರಿಸಿರುವುದು ಸರಿಯಲ್ಲ. ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಪ್ರಸ್ತುತ ನೀಡುತ್ತಿರುವ ಗೌರವ ಧನವನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಳೆದ ಬಾರಿ ನಾವು ಪ್ರತಿಭಟನೆ ನಡೆಸಿದಾಗ, ಮುಖ್ಯಮಂತ್ರಿಗಳು ಖುದ್ದಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇದೀಗ ಅವರು ತಮ್ಮ ಮಾತಿಗೆ ತಪ್ಪಿದ್ದಾರೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ, ನಾವು ಕೇವಲ ಭರವಸೆಗಳನ್ನು ಕೇಳಿ ಸುಮ್ಮನಾಗುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ರಮಾ ಟಿ.ಸಿ. ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
’’ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಿಂದ ಆಶಾ ಕಾರ್ಯಕರ್ತೆಯರು ಸೇರಿ, ವಿಧಾನಸೌಧ ಚಲೋ ಸೇರಿದಂತೆ ಅತ್ಯಂತ ಬೃಹತ್ ಮಟ್ಟದ ಉಗ್ರ ಹೋರಾಟವನ್ನು ನಡೆಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಅವರು ಎಚ್ಚರಿಕೆ ನೀಡಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


