ಭವಿಷ್ಯದ ತಂತ್ರಜ್ಞಾನಕ್ಕೆ ವಿದ್ಯಾರ್ಥಿಗಳು ಸಜ್ಜಾಗಲಿ
ತುಮಕೂರು: ಇಂದಿನ ಆಧುನಿಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಆದ್ದರಿಂದ ಈ ತಂತ್ರಜ್ಞಾನದ ಅರಿವು ಮತ್ತು ಕಲಿಕೆ ಇಂದಿನ ವಿದ್ಯಾರ್ಥಿಗಳಿಗೆ ಅನಿವಾರ್ಯವಾಗಿದೆ ಎಂದು ಎಸ್ಎಸ್ಐಬಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಮಮತಾ ಹೇಳಿದರು.
ನಗರದ ಎಸ್ಎಸ್ಐಬಿಎಂ ಕಾಲೇಜಿನಲ್ಲಿ ಐಬಿಎಂ ಸ್ಕಿಲ್ಸ್ಬಿಲ್ಡ್ ಸಹಯೋಗದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಎಐ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಭವಿಷ್ಯದಲ್ಲಿ ಉಪಯೋಗವಾಗುವ ನವೀನ ತಂತ್ರಜ್ಞಾನಾಧಾರಿತ ಶಿಕ್ಷಣ ನೀಡುವಲ್ಲಿ ಸದಾ ಮುಂಚೂಣಿಯಲ್ಲಿದೆ. ತಂತ್ರಜ್ಞಾನ ದಿನೇದಿನೇ ಅಭಿವೃದ್ಧಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಜ್ಞಾನವರ್ಧನೆಗೆ ಹಾಗೂ ಕೌಶಲ್ಯಾಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಕಾಲೇಜಿನ ಬಿಸಿಎ, ಬಿಕಾಂ ಹಾಗೂ ಬಿಬಿಎ ವಿಭಾಗಗಳ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಾಗಾರವನ್ನು ವಿಶೇಷವಾಗಿ ಆಯೋಜಿಸಲಾಗಿತ್ತು. ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಎಐ ತಂತ್ರಜ್ಞಾನದ ಮೂಲಭೂತ ಅಂಶಗಳು, ಅದರ ಬಳಕೆ, ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಇರುವ ಅವಕಾಶಗಳು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಇಂತಹ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯಕವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಸಂಯೋಜಕ ಶ್ರೇಯಸ್ ಅವರು ಕಾರ್ಯಾಗಾರದ ಸ್ವರೂಪ ಹಾಗೂ ಅದರ ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಾಗಾರದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸಿದ್ಧಾಂತ ಹಾಗೂ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಬಿಕಾಂ, ಬಿಬಿಎ ಹಾಗೂ ಬಿಸಿಎ ವಿಭಾಗಗಳ ಮುಖ್ಯಸ್ಥೆ ಡಾ.ಶಾಲಿಕ ಬಿ.ಎಸ್., ಹರ್ಷಾರಾಧ್ಯ ಮತ್ತು ಶಿವಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕು ನಿಸರ್ಗ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



