
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಸೋಮವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತಿಮ್ಮಾಪುರದಲ್ಲಿರುವ ತಮ್ಮ ತಂದೆ, ದಿ. ಎಚ್.ವೈ.ಮೇಟಿ ಸಮಾಧಿಗೆ ಪೂಜೆ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ್ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.
ವೀರಣ್ಣ ಚರಂತಿಮಠ ಅವರು ಇದೇ ಕ್ಷೇತ್ರದಿಂದ 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕ. ನಾಮಪತ್ರ ಸಲ್ಲಿಕೆಯ ನಂತರ ನಗರದಲ್ಲಿ ಪಕ್ಷದ ವತಿಯಿಂದ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಎರಡೂ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಾಗಲಕೋಟೆಯಲ್ಲಿ ಚುನಾವಣಾ ಕಣ ರಂಗೇರಿದೆ.
ಕಾಂಗ್ರೆಸ್ನಿಂದ ಮೇಟಿ, ಬಿಜೆಪಿಯ ಚರಂತಿಮಠ ನಾಮಪತ್ರ ಸಲ್ಲಿಕೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


