ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಜಯಂತಿ ಆಚರಣೆ
ತುಮಕೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಬುಧವಾರ ಸಿದ್ದಗಂಗಾ ಮಠದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.
ನಂತರ ಮಠದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಜರಿದ್ದರು.
ಸಿದ್ದಗಂಗಾ ಶ್ರೀ ಜಯಂತಿಯಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಿನ ಜಾವದಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಸ್ವಾಮೀಜಿ ಗದ್ದುಗೆಗೆ ವಿಶೇಷ ಅಭಿಷೇಕ, ಪುಷ್ಪಾರ್ಚನೆ ನೆರವೇರಿಸಲಾಯಿತು.
ಶ್ರೀ ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿ ಪುತ್ಥಳಿ ಮೆರವಣಿಗೆ ನಡೆಯಿತು. ಕಂಸಾಳೆ, ಡೊಳ್ಳು ಕುಣಿತ ಒಳಗೊಂಡAತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಭಕ್ತರು ಬೆಳಿಗ್ಗೆಯಿಂದ ಮಠದ ಕಡೆಗೆ ಹೆಜ್ಜೆ ಹಾಕುತ್ತಿದ್ದ ದೃಶ್ಯಗಳು ಕಂಡು ಬಂದವು.
ಭದ್ರತಾ ದೃಷ್ಟಿಯಿಂದ ಮಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೂವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 8 ಡಿವೈಎಸ್ಪಿ, 29 ಸರ್ಕಲ್ ಇನ್ಸ್ಪೆಕ್ಟರ್, 79 ಸಬ್ ಇನ್ಸ್ಪೆಕ್ಟರ್, 114 ಎಎಸ್ಐ, 1,181 ಪೊಲೀಸ್ ಸಿಬ್ಬಂದಿ, 81 ಮಹಿಳಾ ಪೊಲೀಸ್, 4 ಡಿಎಆರ್ ತುಕಡಿ ನಿಯೋಜಿಸಲಾಗಿತ್ತು.





