
ಕೊಪ್ಪಳ: ಟ್ರ್ಯಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಶುಕ್ರವಾರ ನಡೆದಿದೆ.
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್, ಗೌರಮ್ಮ, ಮಂಜಮ್ಮ ಮೃತಪಟ್ಟವರು.
50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಹಿಂದಿನಿಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಮಗು ಸೇರಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಅಥವಾ ಬೆಂಗಳೂರು ಆಸ್ಪತ್ರೆಗೆ ದಾಖಲಿಸುವ ಸಂಭವವಿದೆ. ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಎಸ್ಪಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟ್ರ್ಯಕ್ಟರ್ ಗೆ ಟ್ಯಾಂಕರ್ ಡಿಕ್ಕಿ: ಮಗು ಸೇರಿ 7 ಮಂದಿ ಸಾವು








