
ವಿಜಯಪುರ: ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಮಕ್ಕಳಾದ ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ತಮ್ಮ ಮನೆಯ ದುರಸ್ತಿ ಮಾಡಿಸುತ್ತಿದ್ದ ಗುರುನಾಥ ಬಡಿಗೇರ, ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ದುರಂತ ಸಂಭವಿಸಿದೆ.
ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಶವ ಹೊರ ತೆಗೆದಿದ್ದಾರೆ. ನಾಲ್ವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ತಮ್ಮ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬಸ್ಥರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಎಂದಿನಂತೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ಸಮಯದಲ್ಲಿ ಮನೆಯಿಂದ ಆಚೆ ಮಲಗಿದ್ದ ಗುರುನಾಥ ಅವರ ತಾಯಿ ಹಾಗೂ ಮತ್ತೊಬ್ಬ ಪುತ್ರ ವೀರೇಶ (10) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರ ಮೃತದೇಹಗಳನ್ನ ಹೊರತಗೆದಿದ್ದಾರೆ.

20 ಲಕ್ಷ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬದವರಿಗೆ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಈ ದುರ್ಘಟನೆ ನಡೆಯಬಾರದಿತ್ತು. ಸಾವಿಗೀಡಾದ ನಾಲ್ಕು ಜನರ ಕುಟುಂಬಕ್ಕೆ ತಲಾ 5 ಲಕ್ಷದಂತೆ 20 ಲಕ್ಷ ಪರಿಹಾರ ನೀಡಲಾಗುವುದು. ಬದುಕುಳಿದಿರುವ ಬಾಲಕ ವೀರೇಶ ಬಡಿಗೇರ ವಿದ್ಯಾಭ್ಯಾಸಕ್ಕೆ ವೈಯಕ್ತಿಕವಾಗಿ ನೆರವಾಗುವುದಾಗಿ ಹೇಳಿದರು. ಪರಿಹಾರದ ಹಣವನ್ನು ಬಾಲಕನ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು ಎಂದು ತಿಳಿಸಿದರು.








