
ಬೀದರ್: ಬೀದರ್ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬಹುಕೋಟಿ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.
ಪಶು ವಿವಿಯ ಮಾಜಿ ಉಪಕುಲಪತಿ ಪ್ರೊ.ಎಚ್.ಡಿ.ನಾರಾಯಣಸ್ವಾಮಿ, 2017-18ರಲ್ಲಿ ವಿವಿಯ ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್.ಸುರೇಶ್, ಮೃತ್ಯುಂಜಯ ಹಿರೇಮಠ, ಬೊಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತರು.
2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ವಿವಿ ಹಣವನ್ನು ಲೂಟಿ ಮಾಡಿದ್ದರು. ಬಳಿಕ 2021ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತನಿಖೆ ತೀವ್ರಗೊಳಿಸಿದ್ದರು.
ಈ ಹಗರಣದಲ್ಲಿ ವಿಶ್ವವಿದ್ಯಾಲಯದ ಉನ್ನತಾಧಿಕಾರಿಗಳು, ಸಿಬ್ಬಂದಿ ಹಾಗೂ ಖಾಸಗಿ ಎಂಟರ್‌ಪ್ರೈಸಸ್ ಮಾಲೀಕರು ಶಾಮೀಲಾಗಿ ಯಾವುದೇ ಸಾಮಗ್ರಿ ಖರೀದಿಸದೆಯೇ ನಕಲಿ ಬಿಲ್‌ಗಳನ್ನು ಸೃಷ್ಟಿಸಿರುವುದು ಸಾಬೀತಾಗಿದೆ. ಬೀದರ್ ಜಿಲ್ಲಾ ಸತ್ರ ನ್ಯಾಯಾಲಯ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಪಶು ವಿವಿ ಹಗರಣ: ಮಾಜಿ ಕುಲಪತಿ ಸೇರಿ 6 ಜನರ ಬಂಧನ







